ಡಿ ಡಿ ನ್ಯೂಸ್. ಕೊಪ್ಪಳ
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣ-2ರಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ವೇಳೆ ಅವರು ಮಾತನಾಡಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ಹಾಗೆ ಜಾತ್ರೋತ್ಸವಕ್ಕೆ ಏರ್ಪಾಡು ಮಾಡಬೇಕು. ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. ಸಂಪರ್ಕ ರಸ್ತೆ ಹಾಗೂ ಬೈಪಾಸ್ ರಸ್ತೆಗಳನ್ನು ಸರಿಪಡಿಸಬೇಕು. ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಡಬೇಕು. ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು, ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆಯನ್ನು ಮಾಡಬೇಕು. ಸಿಸಿ ಕ್ಯಾಮರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ತ್, ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಬಿಡುವ ಕುರಿತು ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಾತ್ರೆಗೆ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಲಿದ್ದು, ಕೆ.ಕೆ.ಆರ್.ಟಿ.ಸಿ ಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಜಾತ್ರಾ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು ಎಂದರು.
ಜಾತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಹುಲಿಗಿ ಗ್ರಾಮ ಪಂಚಾಯಿತಿಯಿAದ ನೀಡಬೇಕು. ದೇವಸ್ಥಾನಕ್ಕೆ ಹೋಗುವ ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ಕ್ರಮ ಕೈಗೊಳ್ಳಿ. ಕ್ಷೇತ್ರದಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಲಾಗಿದ್ದು, ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಜಾತ್ರಾ ಸಮಯದಲ್ಲಿ ಮದ್ಯಪಾನವನ್ನು ಸಹ ನಿಷೇಧಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ದೇವಸ್ಥಾನದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮಾತನಾಡಿ, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವವು ಮೇ 13ರಂದು ಸಂಜೆ 5.30ಕ್ಕೆ ನಡೆಯಲಿದೆ. ಜಾತ್ರೆ ನಿಮಿತ್ತ ಮೇ 6ರಿಂದ ಮೇ 16ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅಬಕಾರಿ ಉಪ ಆಯುಕ್ತರಾದ ಸೆಲೀನಾ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.