ಡಿ ಡಿ ನ್ಯೂಸ್. ಕುಷ್ಟಗಿ :
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಹಾಗೂ ಗ್ರಾಮ ಪಂಚಾಯತ್ ಕಂದಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ 25ರಂದು ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದಲ್ಲಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಷ್ಟಗಿ ಪೊಲೀಸ್ ಠಾಣೆಯ ಎ.ಎಸ್.ಐ ಶಿವಕುಮಾರ ಹಿರೇಮಠ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರವು ಹಲವಾರು ಕಾನೂನುಗಳನ್ನು ಜಾರಿಗೊಳಿಸಿದೆ. ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರನ್ವಯ ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಅಲ್ಲದೇ ಪೊಲೀಸ್ ಠಾಣೆಯ ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳೆಂದು ನೇಮಿಸಿದ್ದು, ಪೋಷಣೆ ಮತ್ತು ರಕ್ಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು, ಈ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳ ಮುಂದೆ ಹಾಜರಪಡಿಸಬಹುದಾಗಿದ್ದು, ನಂತರ ಮಕ್ಕಳಿಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ಸೂಕ್ತ ಪುನರವಸತಿಯನ್ನು ಕಲ್ಪಿಸಲಾಗುತ್ತದೆ. ಮಕ್ಕಳಸ್ನೇಹಿ ಪೊಲೀಸ್ ಠಾಣೆಯನ್ನಾಗಿಸಲು, ಪ್ರತಿ ಗುರುವಾರದಂದು ಠಾಣೆಯಲ್ಲಿ “ತೆರೆದ ಮನೆ” ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಮಕ್ಕಳ ಪರವಾದ ಕಾನೂನುಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಕಾಶಿಮಠ ಅವರು ಮಾತನಾಡಿ, ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸುವ ಹಿನ್ನಲೆಯಲ್ಲಿ ಜಾರಿಗೆ ತಂದ ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಕರ್ನಾಟಕ ರಾಜ್ಯ ಸರಕಾರವು ತಿದ್ದುಪಡಿಯನ್ನು-2016ರಲ್ಲಿ ಮಾಡಿದ್ದು, ಅದರನ್ವಯ 2018ರ ಮಾರ್ಚ್ 03ರ ನಂತರದ ಎಲ್ಲಾ ಬಾಲ್ಯವಿವಾಹಗಳು ಶೂನ್ಯ ವಿವಾಹಗಳಾಗಿವೆ. ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕವು ಶಿಕ್ಷಾರ್ಹ ಅಪರಾಧವಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರನ್ವಯ ಕನಿಷ್ಠ 10 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ ರಡ್ಡಿ ಅವರು ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸರ್ಕಾರವು “ಮೀಷನ್ ವಾತ್ಸಲ್ಯ” ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಸರಕಾರಿ ಬಾಲಕರ ಬಾಲಮಂದಿರ ಮತ್ತು ಬಾಲಕಿಯರ ಬಾಲಮಂದಿರಗಳನ್ನು, ವಿಶೇಷ ದತ್ತು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಂಕಷ್ಠಕರ ಪರಸ್ಥಿತಿಯಲ್ಲಿರುವ ಮಕ್ಕಳಿಗಾಗಿ ಪ್ರಾಯೋಜಕತ್ವ, ವಿಶೇಷ ಪಾಲನಾ ಯೋಜನೆ, ಪಿ.ಎಮ್ ಕರ್ಸ ಫಾರ್ ಚಿಲ್ಡ್ರನ್ ಯೋಜನೆ, ಮುಖ್ಯಮಂತ್ರಿ ಬಾಲ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆಂದು ವಿವರಿಸಿದರು.
ಕಂದಕೂರು ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಎಂ ಗೋಣ್ಣಾಗರ ಅವರು ಮಕ್ಕಳ ಹಕ್ಕುಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯೆತೆಯ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ತಿಳಿಸಿದರು. ಕುಷ್ಟಗಿ ಶಿಶು ಅಭಿವೃದ್ದಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಅವರು ಹದಿಹರಿಯದ ಮಕ್ಕಳ ಸಮಸ್ಯೆಗಳ ಕುರಿತು ಸಲಹೆಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೇವರಾಜ ತಿಲಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಹಶಿಕ್ಷಕರು, ಸಿಬ್ಬಂದಿ ವರ್ಗದವರು, ಪೊಲೀಸ್ ಇಲಾಖೆ ಸೇರಿದಂತೆ ಗ್ರಾಮಸ್ಥರು ಪಾಲ್ಗೊಡಿದ್ದರು.