deshadoothanews

ಜಿಲ್ಲಾ ಜಾಗೃತಿ, ಉಸ್ತುವಾರಿ ಸಮಿತಿ ಸಭೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ :

 ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಅಧ್ಯಕ್ಷತೆಯಲ್ಲಿ ಜೂನ್ 26ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಎಸ್ಸಿ ಮತ್ತು ಎಸ್ಟಿ ಸಮುದಾಯಗಳ
ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳ ನಿಯಂತ್ರಣಕ್ಕಾಗಿ ತಾಲೂಕು ಮಟ್ಟದ ಡಿ.ಎಲ್.ವಿ.ಸಿ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಈ ಸಮಿತಿಯ ಸಭೆಗೆ ಸಮಿತಿಯ ಸದಸ್ಯರನ್ನು ಕಡ್ಡಾಯವಾಗಿ ಆಹ್ವಾನಿಸಬೇಕು. ತಾಲೂಕುಗಳಲ್ಲಿ ಸಭೆ ನಡೆಸುವುದರಿಂದ ಪ್ರಕರಣಗಳ ಮೇಲಿನ ನಿಗಾಕ್ಕೆ ಹಾಗೂ ನಿಯತ್ರಣಕ್ಕೆ ತುಂಬಾ ಅನುಕೂಲವಾಗಲಿದೆ ಎಂದರು. ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು ಎಂದರು.
ಸಮುದಾಯ ಭವನಗಳ ನಿರ್ವಹಣೆ, ಭವನ ನಿರ್ಮಾಣ, ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳು, ಭೂ ಒಡೆತನ ಯೋಜನೆ, ಅಂಗನವಾಡಿ ಹಾಗೂ ಹಾಸ್ಟೆಲಗಳ ಸ್ಥಿತಿಗತಿ ಕುರಿತಂತೆ ಸಭೆಯಲ್ಲಿ ಸಮಿತಿಯ ಸದಸ್ಯರು ವಿಷಯ ಪ್ರಸ್ತಾಪಿಸಿದರು.
ಸಮುದಾಯ ಭವನಗಳ ಸೂಕ್ತ ನಿರ್ವಹಣೆಗೆ, ಭೂ ಒಡೆತನ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಗನವಾಡಿ ಕಟ್ಟಡ ಹಾಗೂ ಸಂಬಂಧಿಸಿದ ವಸತಿ ನಿಲಯಗಳ ಮಕ್ಕಳ ಲಭ್ಯತೆ ಅನುಸಾರ ಬಾಡಿಗೆ ಕಟ್ಟಡ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಜಿಲ್ಲೆಯ ವಸತಿ ಶಾಲೆ ಹಾಗೂ ನಿಲಯಗಳಲ್ಲಿ ಪೊಲೀಸ್ ಇಲಾಖೆಯಿಂದ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಹಾಯವಾಣಿ ಸಂಖ್ಯೆಯ ಕುರಿತು ಅರಿವು ಮೂಡಿಸಲಾಗಿದೆ. ಇನ್ನೂ ಕೆಲವು ವಸತಿ ನಿಲಯಗಳಲ್ಲಿ ಪೊಲೀಸ್ ಕಾವಲು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಮದ್ಯ ಮಾರಾಟದ ಮೇಲೆ ಪೊಲೀಸ್ ಇಲಾಖೆಯು ನಿಗಾ ವಹಿಸಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್. ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Leave A Reply

Your email address will not be published.