deshadoothanews

ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ

ಡಿ ಡಿ ನ್ಯೂಸ್. ಕೊಪ್ಪಳ

0

ಡಿ ಡಿ ನ್ಯೂಸ್. ಕೊಪ್ಪಳ : ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಕೆಲವೊಮ್ಮೆ ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಬಹುದಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಡೆಂಗೆ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಹೇಳಿದರು.


ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟಿಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ (ಎನ್‌ವಿಬಿಡಿಸಿಪಿ) ಅಡಿಯಲ್ಲಿ ಡೆಂಗೆ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾ ನಿಯಂತ್ರಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆಯ ಸುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಹಾಗೂ ಮನೆಯಲ್ಲಿನ ನೀರು ಶೇಖರಣಾ ಸಲಕರಣೆಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಿಯಮಿತವಾಗಿ ಚರಂಡಿಗಳ ಸುತ್ತ ಬ್ಲೀಚಿಂಗ್ ಫೌಡರ್ ಬಳಕೆ, ಚರಂಡಿಗಳ ಹೂಳನ್ನು ತೆಗೆಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕುಮಟ್ಟದಲ್ಲಿ ಸಹ ಸಮನ್ವಯ ಸಮಿತಿ ಸಭೆ ನಡೆಸಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನ ಮಾಡಬೇಕು. ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ನಿಯಮಿತವಾಗಿ ನೀರಿನ ಸರಬರಾಜು, ಸೊಳ್ಳೆಗಳ ನಿಯಂತ್ರಣ ಮತ್ತು ಪರಿಸರ ಕಾಪಾಡುವಿಕೆಗೆ ಸೂಕ್ತ ಕ್ರಮಕೈಗೊಳ್ಳಬೇಕು. ವಿವಿಧ ಮಾಧ್ಯಮಗಳ ಮೂಲಕ ಆರೋಗ್ಯ ಶಿಕ್ಷಣ ನೀಡಲು ಒತ್ತು ಕೊಡಬೇಕು ಎಂದು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಸೊಳ್ಳೆಗಳ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ದ್ರಾವಣ ಸಿಂಪಡಿಸಬೇಕು. ಗ್ರಾಮಗಳಲ್ಲಿನ ನಿರುಪಯುಕ್ತ ಗುಂಡಿ ತಗ್ಗುಗಳನ್ನು ಬಾವಿಗಳನ್ನು ಮುಚ್ಚಿಸಿ ಅಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಕೆಎಸ್‌ಆರ್‌ಟಿಸಿ ಕಾರ್ಯಗಾರ ಮತ್ತು ಡೀಪೋಗಳಲ್ಲಿ ಟೈರಗಳನ್ನು ಒಂದರ ಮೇಲೊಂದರಂತೆ ಪೇರಿಸಿಟ್ಟು ಪ್ಲಾಸ್ಟಿಕ್ ಸೀಟನಿಂದ ಮುಚ್ಚಬೇಕು. ಕಾಲಕಾಲಕ್ಕೆ ಲಾರ್ವಾನಾಶಕಗಳನ್ನು ಬಳಸಿ ಸೊಳ್ಳೆ ಸಂತತಿಯನ್ನು ನಾಶಪಡಿಸಬೇಕು, ಹಾಸ್ಟೇಲ್ ಪರಿಸರದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಅಲ್ಲಿನ ವಿದ್ಯಾರ್ಥಿಗಳಲ್ಲಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವೈಯಕ್ತಿಕ ರಕ್ಷಣೆ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಮೂಲಕ ಜಾಗೃತಿ ಮೂಡಿಸಬೇಕು. ಡೆಂಗೆ, ಚಿಕೂನ್‌ಗುನ್ಯ, ಮಲೇರಿಯಾ, ಮೆದುಳುಜ್ವರ, ಜಿಕಾ ವೈರಸನಂತಹ ರೋಗಗಳು ಮತ್ತು ಅವುಗಳ ಲಕ್ಷಣಗಳ ಬಗ್ಗೆ ಪ್ರತಿ ದಿನ ಶಾಲೆಯಲ್ಲಿ ಆರೋಗ್ಯ ಶಿಕ್ಷಣ ನೀಡಬೇಕು. ಶಾಲಾ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಗೆ, ಚಿಕೂನ್ ಗುನ್ಯ, ಮೆದುಳು ಜ್ವರ, ಜಿಕಾ ವೈರಸ್ ರೋಗ ಲಕ್ಷಣಗಳು, ಅವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ ಅವರು ಪ್ರಾತ್ಯಕ್ಷಿಕೆಯ ಮೂಲಕ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಅಲಕನಂದಾ ಮಳಗಿ, ಬಳ್ಳಾರಿ ಎಸ್.ಎಂ.ಓ ಡಾ.ಶ್ರೀಧರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪ್ರಾಕಾಶ ಬಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಶಶೀಧರ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಮೇಶ ಮೂಲಿಮನಿ ಸೇರಿದಂತೆ ಎಲ್ಲ ತಾಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.