ಡಿ ಡಿ ನ್ಯೂಸ್. ಕೊಪ್ಪಳ :
ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ರದ್ಧತಿ) ಕಾಯ್ದೆ, 1970 ಮತ್ತು ಕರ್ನಾಟಕ ನಿಯಮಗಳು 1974ರ ಮೇರೆಗೆ ಹಾಗೂ ಇತರೆ ಅನ್ವಯಿಸುವ ಕಾರ್ಮಿಕ ಕಾಯ್ದೆಗಳನ್ವಯ ಕ್ರಮಗಳನ್ನು ಕೈಗೊಳ್ಳುವಾಗ ಕಾರ್ಮಿಕ ಇಲಾಖೆಯ ಮಾರ್ಗಸೂಚಿಗಳ ಪಾಲನೆ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜುಲೈ 24ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಇಎಸ್ ಐ ಮತ್ತು ಪಿಎಫ್ ಸೌಲಭ್ಯಗಳನ್ನು ಪಾವತಿಸುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ, ಇತರ ಸೌಲಭ್ಯಗಳು ಸರಿಯಾಗಿ ದೊರಕುವಂತೆ ವ್ಯವಸ್ಥೆ ಮಾಡಬೇಕು.
ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯಗಳು ಸಿಗುತ್ತಿರುವುದರ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು.
ಟೆಂಡರ್ ಕರೆಯುವ ಮುನ್ನ ಸರ್ಕಾರದ ಮಾರ್ಗಸೂಚಿಯನ್ವಯ ಏಜೆನ್ಸಿಯವರಿಗೆ ಷರತ್ತುಗಳನ್ನು ವಿದಿಸಿ ಪ್ರಕ್ರಿಯೆ ನಡೆಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ಹಾಗೂ ಇತರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಯ ವಿವರದ ಮಾಹಿತಿಯ ಪಟ್ಟಿ ಸಿದ್ಧಪಡಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಕಚೇರಿಯಲ್ಲಿನ ಹೊರಗುತ್ತಿಗೆ ಕಾರ್ಮಿಕರ ಮಾಹಿತಿಯನ್ನು ಕಾರ್ಮಿಕ ಇಲಾಖೆಗೆ ನೀಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಕ್ಕು ಮೊದಲು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು, ಹೊರಗುತ್ತಿಗೆ ನೌಕರರಿಗೆ ವಿವಿಧ ಸೌಲಭ್ಯಗಳ ಪಾವತಿಗೆ ಸಂಬಂಧಿಸಿದಂತೆ ಕಾರ್ಮಿಕ ಕಾಯಿದೆಯಗಳ ಬಗ್ಗೆ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.